ಜನಪದ ಗಾಯಕ ಮ್ಯೂಸಿಕ್ ಮೈಲಾರಿ ಬಂಧನ
‘ಬಾಗಲಕೋಟೆ ಬಸ್ ಸ್ಟ್ಯಾಂಡ್ ನ್ಯಾಗ ನಿಂತಾಳ ಕಡಿಬಿಡಿಕಿ’ ಹಾಡಿನಿಂದ ಫೇಮಸ್ ಆಗಿದ್ದ ಮ್ಯೂಸಿಕ್ ಮೈಲಾರಿ ಇದೀಗ ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಡಿ ಪೊಲೀಸರ ವಶಕ್ಕೆ ಒಳಗಾಗಿದ್ದಾನೆ.
ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ
ಬಾಗಲಕೋಟೆ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಉತ್ತರ ಕರ್ನಾಟಕದ ಜನಪದ ಗಾಯಕ ಮ್ಯೂಸಿಕ್ ಮೈಲಾರಿ (Music Mailari)ಯನ್ನು ಪೊಲೀಸರು ಬಂಧಿಸಿದ್ದಾರೆ.
ಮಹಾಲಿಂಗಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿ, ಆರೋಪಿಯು ಮಹಾರಾಷ್ಟ್ರಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ಪೊಲೀಸರ ತಂಡ ಚೇಸ್ ನಡೆಸಿ ಬಂಧನಕ್ಕೊಳಪಡಿಸಿದೆ. ಬಂಧಿತ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.
ಯೂಟ್ಯೂಬ್‌ನಲ್ಲಿ ಟ್ರೆಂಡಿಂಗ್ ಸ್ಟಾರ್ ಎಂದೇ ಖ್ಯಾತಿ ಪಡೆದಿರುವ ಮ್ಯೂಸಿಕ್ ಮೈಲಾರಿ, ಉತ್ತರ ಕರ್ನಾಟಕದ ಜನಪದ ಸಿಂಗರ್ ಆಗಿದ್ದಾನೆ. ಮಹಾಲಿಂಗಪುರ ಹೊರವಲಯದ ಲಾಡ್ಜ್‌ವೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಈತನ ವಿರುದ್ಧ ಕೇಳಿಬಂದಿತ್ತು.
ಚಿಕ್ಕೋಡಿ ತಾಲೂಕಿನ ಜಾಗನೂರು ಗ್ರಾಮದಲ್ಲಿ ಅಕ್ಟೋಬರ್ 24ರಂದು ಹನುಮಂತ ದೇವರ ಓಕುಳಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭ ಊರಲ್ಲಿ ಆರ್ಕೆಸ್ಟ್ರಾ ಕಾರ್ಯಕ್ರಮ ನಡೆಯುತ್ತಿದ್ದು, ಹಾಡಲು ಮ್ಯೂಸಿಕ್ ಮೈಲಾರಿ ಆಗಮಿಸಿದ್ದ. ಅದೇ ಆರ್ಕೆಸ್ಟ್ರಾದಲ್ಲಿ ಅಪ್ರಾಪ್ತ ಬಾಲಕಿ ನೃತ್ಯಕ್ಕೆ ಬಂದಿದ್ದಳು. ಈ ಅವಧಿಯಲ್ಲಿ ಲಾಡ್ಜ್‌ನಲ್ಲಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.
ಅತ್ಯಾಚಾರ ನಡೆಸಿ ಅದರ ವಿಡಿಯೊ ಮಾಡಲಾಗಿದೆ ಎಂದು ಅಪ್ರಾಪ್ತ ಬಾಲಕಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಡಿಸೆಂಬರ್ 14ರಂದು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಡಿಸೆಂಬರ್ 15ರಂದು ಪ್ರಕರಣವನ್ನು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಪ್ರಕರಣವನ್ನು ಪೋಕ್ಸೊ ಕಾಯ್ದೆಯಡಿ ದಾಖಲಿಸಲಾಗಿದೆ.
ಈ ಪ್ರಕರಣದಲ್ಲಿ ಮ್ಯೂಸಿಕ್ ಮೈಲಾರಿ ಸೇರಿದಂತೆ ಶಂಕರ್ ಅಥಣಿ, ಸಿಂಗರ್ ದಾನವಿ, ಬೆಂಕಿ ಲತಾ, ಸಿಂಗರ್ ರುಕ್ಮಿಣಿ, ಡಿಜೆ ಮಹಾಂತೇಶ್ ಸೇರಿ ಒಟ್ಟು ಏಳು ಜನರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ಮ್ಯೂಸಿಕ್ ಮೈಲಾರಿ ಹಾಡಿದ್ದ ‘ಬಾಗಲಕೋಟೆ ಬಸ್ ಸ್ಟ್ಯಾಂಡ್ ನ್ಯಾಗ ನಿಂತಾಳ ಕಡಿಬಿಡಿಕಿ’ ಎಂಬ ಹಾಡು ಉತ್ತರ ಕರ್ನಾಟಕದಲ್ಲಿ ಭಾರೀ ಜನಪ್ರಿಯತೆ ಪಡೆದಿತ್ತು. ಇದರಿಂದ ಆತ ಟ್ರೆಂಡಿಂಗ್ ಸ್ಟಾರ್ ಎಂದೇ ಗುರುತಿಸಿಕೊಂಡಿದ್ದ. ಆದರೆ ಇದೀಗ ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಡಿ ಪ್ರಕರಣ ದಾಖಲಾಗಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.


